ಉಡುಪಿ: ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿರುವ ನೂತನ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು 2026ರ ನವೆಂಬರ್ 15ರೊಳಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಲೋಕಾರ್ಪಣೆಯ ದಿನಾಂಕವನ್ನು ಘೋಷಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತ್ಯೇಕಗೊಂಡು ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದು 28 ವರ್ಷಗಳು ಕಳೆದಿದ್ದರೂ, ಜಿಲ್ಲೆಯ ಜನರಿಗೆ ಸುಸಜ್ಜಿತ ಜಿಲ್ಲಾ ಆಸ್ಪತ್ರೆಯ ಸೌಲಭ್ಯ ಇನ್ನೂ ಪೂರ್ಣ ಪ್ರಮಾಣದಲ್ಲಿ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2021ರಲ್ಲಿ ಆರಂಭಗೊಂಡ ನೂತನ ಜಿಲ್ಲಾಸ್ಪತ್ರೆಯ ನಿರ್ಮಾಣ ಕಾಮಗಾರಿ 2023ರ ವೇಳೆಗೆ ಬಹುತೇಕ ಪೂರ್ಣಗೊಂಡಿದ್ದರೂ, ಆಸ್ಪತ್ರೆ ಈವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಕಳೆದ ಮೂರೂವರೆ ವರ್ಷಗಳಿಂದ ವೈಯಕ್ತಿಕವಾಗಿ, ಪತ್ರಗಳ ಮೂಲಕ ಹಾಗೂ ವಿಧಾನಮಂಡಲದ ಅಧಿವೇಶನಗಳಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗಿದೆ. ಹಿಂದಿನ ಮತ್ತು ಪ್ರಸ್ತುತ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಆಸ್ಪತ್ರೆಯ ಕಾರ್ಯಾರಂಭದ ಕುರಿತು ಸ್ಪಷ್ಟ ನಿರ್ಧಾರ ಹೊರಬಿದ್ದಿಲ್ಲ ಎಂದು ತಿಳಿಸಿದರು.
ಇತ್ತೀಚೆಗೆ ಹಳೆಯ ಆಸ್ಪತ್ರೆಯಲ್ಲಿದ್ದ ಸುಮಾರು 30 ವರ್ಷಗಳಷ್ಟು ಹಳೆಯದಾದ, ಜೀರ್ಣಾವಸ್ಥೆಯಲ್ಲಿರುವ ಹಾಗೂ ತುಕ್ಕು ಹಿಡಿದಿರುವ ಮಂಚಗಳು, ಕಪಾಟುಗಳು ಮತ್ತು ಇತರ ಉಪಕರಣಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲು ಇಲಾಖೆ ಮುಂದಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆರು ಮಹಡಿಗಳ 250 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯನ್ನು ಆಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸುವ ಬದಲು ಹಳೆಯ ಉಪಕರಣಗಳನ್ನು ಸ್ಥಳಾಂತರಿಸುವ ಕ್ರಮಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಕುರಿತು ಎಚ್ಚರಿಕೆ ನೀಡಿದ ಬಳಿಕ ಸ್ಥಳಾಂತರ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.
ನೂತನ ಜಿಲ್ಲಾಸ್ಪತ್ರೆಯ ಮೂಲ ಯೋಜನೆಗೆ ಅನುಗುಣವಾಗಿ ಗುಣಮಟ್ಟದ ಹೊಸ ಪೀಠೋಪಕರಣಗಳು, ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಅಗತ್ಯ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಬೇಕು. ಎಂಆರ್‌ಐ, ಸಿಟಿ ಸ್ಕ್ಯಾನಿಂಗ್, ಡಿಜಿಟಲ್ ಎಕ್ಸ್‌ರೇ, ತೀವ್ರ ನಿಗಾ ಘಟಕ (ಐಸಿಯು), ವೆಂಟಿಲೇಟರ್ ಸೇರಿದಂತೆ ಸಮಗ್ರ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕು. ಆಸ್ಪತ್ರೆಯ ಸುಗಮ ಕಾರ್ಯನಿರ್ವಹಣೆಗೆ ವೈದ್ಯರು, ತಜ್ಞ ವೈದ್ಯರು, ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಅಗತ್ಯ ಹುದ್ದೆಗಳನ್ನು ಮಂಜೂರು ಮಾಡಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಇತರ ಸುಸಜ್ಜಿತ ಜಿಲ್ಲಾ ಆಸ್ಪತ್ರೆಗಳ ಮಾದರಿಯಲ್ಲಿ ಉಡುಪಿ ಜಿಲ್ಲಾಸ್ಪತ್ರೆಯನ್ನೂ ಸಮಗ್ರ ವೈದ್ಯಕೀಯ ಸೇವೆಗಳೊಂದಿಗೆ ಅಭಿವೃದ್ಧಿಪಡಿಸಬೇಕು. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಆಸ್ಪತ್ರೆಯ ಕಟ್ಟಡವು ಅಗತ್ಯ ಸೌಲಭ್ಯಗಳ ಕೊರತೆಯಿಂದಾಗಿ ಜನರಿಗೆ ನಿರೀಕ್ಷಿತ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು.
ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ. ಜಿಲ್ಲೆಯ ಜನರ ಆರೋಗ್ಯ ಮತ್ತು ಜೀವ ರಕ್ಷಣೆಯ ದೃಷ್ಟಿಯಿಂದ ಸಚಿವರು ನವೆಂಬರ್ 15ರೊಳಗೆ ನೂತನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆಸ್ಪತ್ರೆಯ ಲೋಕಾರ್ಪಣೆಯ ಕುರಿತು ಸ್ಪಷ್ಟ ಭರವಸೆ ನೀಡುವುದರೊಂದಿಗೆ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳು, ಮೂಲಸೌಕರ್ಯ ಹಾಗೂ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಕಾಲಮಿತಿಯ ಕಾರ್ಯಯೋಜನೆಯನ್ನು ಪ್ರಕಟಿಸಬೇಕು ಎಂದು ಮನವಿ ಮಾಡಿದರು.
ನಿಗದಿತ ದಿನಾಂಕದೊಳಗೆ ಆರೋಗ್ಯ ಸಚಿವರಿಂದ ಯಾವುದೇ ಸ್ಪಷ್ಟ ಭರವಸೆ ದೊರೆಯದಿದ್ದಲ್ಲಿ ಜಿಲ್ಲೆಯ ಜನತೆಯೊಂದಿಗೆ ಸೇರಿ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದಿನೇಶ್ ಅಮೀನ್, ಪ್ರಭಾಕರ ಪೂಜಾರಿ, ದಿನಕರ ಬಾಬು, ರಾಜು ಕುಲಾಲ್, ಗಿರೀಶ್ ಅಂಚನ್, ಜಗದೀಶ್ ಆಚಾರ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.




