Monday, September 14, 2026

ಮೃತ ವ್ಯಕ್ತಿಯ ಹೆಸರಿನಲ್ಲಿ ₹5 ಲಕ್ಷ ವಸೂಲಿಗೆ ಯತ್ನ: ಇಬ್ಬರ ಬಂಧನ

ಉಡುಪಿ: ಎಂಟು ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ₹5 ಲಕ್ಷ ಬಾಕಿ ಹಣ ನೀಡುವಂತೆ ಕುಟುಂಬಸ್ಥರಿಗೆ ಬೆದರಿಕೆ ಹಾಕಿ ಹಣ ವಸೂಲಿಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಡುಪಿಯ ಕುಕ್ಕುಂಜೆ ಸಂತೋಷನಗರದ ಸಾಜೀದ್ ಹಾಗೂ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೆಂಪನಳ್ಳಿ ನಿವಾಸಿ ಸೈಯದ್ ಸೈಫ್ ಅಹಮ್ಮದ್ (40) ಎಂದು ಗುರುತಿಸಲಾಗಿದೆ.

ಜುಲೈ 2ರಂದು ದೂರುದಾರರಿಗೆ ವಾಟ್ಸ್‌ಆ್ಯಪ್ ಮೂಲಕ ಕರೆ ಮಾಡಿದ ವ್ಯಕ್ತಿಯೊಬ್ಬ ಹಿಂದಿಯಲ್ಲಿ ಮಾತನಾಡಿ, ‘ನಿಮ್ಮ ಮಗ ಅಜಿತ್ ಪಡಿಯಾರ್ ನಮ್ಮೊಂದಿಗೆ ವಜ್ರದ ವ್ಯವಹಾರ ನಡೆಸಿದ್ದು, ₹5 ಲಕ್ಷ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಕೂಡಲೇ ಹಣ ಪಾವತಿಸಬೇಕು’ ಎಂದು ಒತ್ತಾಯಿಸಿದ್ದ ಎನ್ನಲಾಗಿದೆ.

ಆದರೆ ಅಜಿತ್ ಅವರು ಎಂಟು ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ಯಾವುದೇ ವಜ್ರದ ವ್ಯವಹಾರದ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ಇಲ್ಲ ಎಂದು ತಿಳಿಸಿದರೂ ಆರೋಪಿಗಳು ಹಣ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ದುಬೈಯಲ್ಲಿದ್ದ ಅಜಿತ್ ಅವರ ಮತ್ತೊಬ್ಬ ಪುತ್ರ ಅಮೀತ್ ಅವರಿಗೂ ವಾಟ್ಸ್‌ಆ್ಯಪ್ ಮೂಲಕ ಕರೆ ಮಾಡಿ, ₹5 ಲಕ್ಷ ಬಾಕಿ ಹಣ ಪಾವತಿಸದಿದ್ದರೆ ಊರಿನಲ್ಲಿರುವ ಅವರ ಪತ್ನಿ ರಕ್ಷಾ ಅವರಿಗೆ ತೊಂದರೆ ನೀಡುವುದಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪತ್ತೆಗಾಗಿ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ಮಾರ್ಗದರ್ಶನದಲ್ಲಿ ತನಿಖಾ ಪಿಎಸ್‌ಐ ರತ್ನಾಕರ ಕೆ. ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ತನಿಖೆ ನಡೆಸಿದ ತಂಡವು ಜುಲೈ 20ರಂದು ಸಾಜೀದ್‌ನನ್ನು ಹಾಗೂ ಆಗಸ್ಟ್ 26ರಂದು ಸೈಯದ್ ಸೈಫ್ ಅಹಮ್ಮದ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ನ್ಯಾಯಾಲಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸೈಯದ್ ಸೈಫ್ ಅಹಮ್ಮದ್‌ನನ್ನು ಪೊಲೀಸ್ ಅಭಿರಕ್ಷೆಗೆ ಪಡೆದು ತನಿಖೆ ಮುಂದುವರಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಹಾಗೂ ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಪಿಎಸ್‌ಐ ರತ್ನಾಕರ ಕೆ., ಸಿಬ್ಬಂದಿಗಳಾದ ಪ್ರಸನ್ನ, ಜೀವನ್‌ಕುಮಾರ್, ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ್, ಹೇಮಂತ್‌ಕುಮಾರ್ ಹಾಗೂ ಉಡುಪಿ ನಗರ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.