ಉಡುಪಿ: ಭೂಗತ ಪಾತಕಿ ಹೇಮಂತ ಪೂಜಾರಿ ಹೆಸರಿನಲ್ಲಿ ಉಡುಪಿ ಜಿಲ್ಲೆಯ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳಿಗೆ ಕರೆ ಮಾಡಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುರೇಶ್ ಅಮೀನ್ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಪು ತಾಲೂಕಿನ ಎರ್ಮಾಳು ಬಡಾ ಗ್ರಾಮದ ಬಟ್ರತೋಟ ಹೌಸ್‌ನ ನಿವಾಸಿ, ದಿವಂಗತ ಭೋಜ ಅಮೀನ್ ಅವರ ಪುತ್ರ ಸುರೇಶ್ ಅಮೀನ್ ಬಂಧಿತ ಆರೋಪಿ. ಈತ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳ ಮೊಬೈಲ್ ಸಂಖ್ಯೆಗಳು ಮತ್ತು ಇತರ ಮಾಹಿತಿಗಳನ್ನು ಭೂಗತ ಪಾತಕಿ ಹೇಮಂತ ಪೂಜಾರಿಗೆ ಒದಗಿಸುವ ಮೂಲಕ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಐದು, ಶಿರ್ವ ಪೊಲೀಸ್ ಠಾಣೆಯಲ್ಲಿ ಒಂದು, ಕಾಪು ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ.
ಪ್ರಕರಣಗಳ ತನಿಖೆ ಮುಂದುವರಿಸಿದ ಪೊಲೀಸರು, ಸಂತ್ರಸ್ತ ಉದ್ಯಮಿಗಳ ಮಾಹಿತಿ ಒದಗಿಸಿದ್ದ ಆರೋಪದ ಮೇಲೆ ಸುರೇಶ್ ಅಮೀನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಿದ್ದಾರೆ. ದಾಖಲಾಗಿರುವ ಪ್ರಕರಣಗಳ ಪೈಕಿ ಒಂದರಲ್ಲಿ, ಉದ್ಯಮಿಯೊಬ್ಬರು ಬೇಡಿಕೆಯಿಟ್ಟ ಹಣ ನೀಡದಿದ್ದ ಹಾಗೂ ದೂರವಾಣಿ ಕರೆ ಸ್ವೀಕರಿಸದ ಕಾರಣ ಅವರನ್ನು ಕೊಲೆ ಮಾಡಲು ಸುರೇಶ್ ಅಮೀನ್ ಮತ್ತು ಹೇಮಂತ ಪೂಜಾರಿ ಒಳಸಂಚು ರೂಪಿಸಿದ್ದರು ಎಂಬುದು ತಾಂತ್ರಿಕ ಸಾಕ್ಷ್ಯಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕೃತ್ಯಕ್ಕೆ ಸಂಬಂಧಿಸಿದಂತೆ ಹೇಮಂತ ಪೂಜಾರಿ ಕಳುಹಿಸಿದ್ದ ಐದು ಲಕ್ಷ ರೂಪಾಯಿಗಳ ಪೈಕಿ ಖರ್ಚು ಮಾಡಿದ ಹಣವನ್ನು ಹೊರತುಪಡಿಸಿ ಉಳಿದ ರೂ. 4.13 ಲಕ್ಷವನ್ನು ಸುರೇಶ್ ಅಮೀನ್‌ನಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ಆತನನ್ನು ಪೊಲೀಸ್ ಅಭಿರಕ್ಷೆಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇರುವುದರಿಂದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.




