ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು 2026ರ ಮಾರ್ಚ್ 13ರಂದು ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರ ಏಕಸದಸ್ಯ ಪೀಠ ಗುರುವಾರ ತೀರ್ಪು ಪ್ರಕಟಿಸಿತು.
ಅರ್ಜಿಯು ಊರ್ಜಿತವಾಗುವುದಿಲ್ಲ ಎಂದು ತಿಳಿಸಿದ ನ್ಯಾಯಾಲಯ, ಗಡಿಪಾರು ಆದೇಶದ ವಿರುದ್ಧ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದು ತಿಳಿಸಿದೆ.
ಇದೇ ವೇಳೆ, ಮುಂದಿನ ಎರಡು ವಾರಗಳ ಕಾಲ ಗಡಿಪಾರು ಸಂಬಂಧ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಪ್ರಕರಣದ ವಿಸ್ತೃತ ತೀರ್ಪು ಇನ್ನಷ್ಟೇ ಲಭ್ಯವಾಗಬೇಕಿದೆ.




