ಉಡುಪಿ: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ (MDMA) ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ರೂ.1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಸೈಯ್ಯದ್ ಮೊಹಮ್ಮದ್ ಮೆಹರಾಜ್ (19), ಸೈಯ್ಯದ್ ಮನ್ಸೂರ್ ಅವರ ಪುತ್ರ, ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ, ಆಕಾಶವಾಣಿ ಸಮೀಪ ನಿವಾಸಿ ಹಾಗೂ ಮೂಲತಃ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ನಿವಾಸಿ ಎಂದು ಗುರುತಿಸಲಾಗಿದೆ.
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಎಂ.ಡಿ.ಎಂ.ಎ ಮಾದಕ ವಸ್ತು ಹೊಂದಿದ್ದು, ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲ ಭಾಗಗಳ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಬಂಧಿಸಲಾಯಿತು.
ಆರೋಪಿಯಿಂದ 1 ಗ್ರಾಂ 03 ಮಿಲಿಗ್ರಾಂ ಎಂ.ಡಿ.ಎಂ.ಎ, ಮಾದಕ ವಸ್ತು ಸಾಗಾಟಕ್ಕೆ ಬಳಸುತ್ತಿದ್ದ ಒಂದು ಸ್ಕೂಟರ್ ಸೇರಿದಂತೆ ಒಟ್ಟು ರೂ.1,52,000 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/2026ರಡಿ ಎನ್‌ಡಿಪಿಎಸ್ ಕಾಯ್ದೆ-1985ರ ಕಲಂ 8(c) ಹಾಗೂ 22(b) ಅನ್ವಯ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




