ಉಡುಪಿ: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಕಟ್ನಾರಿ, ಶೇಖ್‌ಪುರ ನಿವಾಸಿ ಸೂರಜ್ ಕುಮಾರ್ (31) ಎಂದು ಗುರುತಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಕುಂದಾಪುರ ಪೊಲೀಸರ ತಂಡ ಸೂರಜ್ ಕುಮಾರ್‌ನನ್ನು ವಶಕ್ಕೆ ಪಡೆದು, ಪ್ರಕರಣದ ತನಿಖಾಧಿಕಾರಿಯವರ ಮುಂದೆ ಹಾಜರುಪಡಿಸಿದೆ. ಬಳಿಕ ಆತನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ನ್ನು ವಶಕ್ಕೆ ಪಡೆಯಲಾಗಿದೆ.
ಆ.7ರಂದು ನಡೆದಿತ್ತು ಕೊಲೆ:
ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಡೇವಿಡ್ ಡಿಸೋಜಾ ಅವರನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರನು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ನೋಲ್ ರಸ್ತೋಗಿ ಮತ್ತು ಜಿಯಾಹುಲ್ ವಾಜುಲ್ ಶೇಖ್ @ ದೀಪಕ್ ಅವರನ್ನು ಈಗಾಗಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಅಲ್ಲದೆ, ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ ಕೃತ್ಯಕ್ಕೆ ಹಣಕಾಸು ಪೂರೈಸಿದ ಆರೋಪದ ಮೇಲೆ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಹಾಗೂ ಕಿಶೋರ್ ರಾಮ ಪೂಜಾರಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಕರಣದ 1ನೇ ಆರೋಪಿ ರಾಜು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಅಜ್ಜರಕಾಡಿನಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಸೂರಜ್ ಕುಮಾರ್‌ನನ್ನು ಆಗಸ್ಟ್ 20ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.




