ಉಡುಪಿ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ನವೆಂಬರ್ 15ರಿಂದ 17ರವರೆಗೆ ಕರಾವಳಿ ಕರ್ನಾಟಕದ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಕಾಪು ಹೊಸ ಮಾರಿಗುಡಿ ದೇವಸ್ಥಾನ, ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ.
ನವೆಂಬರ್ 15ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಅವರು ಸಂಜೆ 5 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸಂಜೆ 7.30ಕ್ಕೆ ಕೊಲ್ಲೂರಿನ ಆರ್.ಎನ್. ಶೆಟ್ಟಿ ಅತಿಥಿಗೃಹ ತಲುಪಿ ವಾಸ್ತವ್ಯ ಹೂಡಲಿದ್ದಾರೆ.
ನವೆಂಬರ್ 16ರ ಸೋಮವಾರ ಬೆಳಿಗ್ಗೆ ಬೆಳಿಗ್ಗೆ 6.15ರಿಂದ 10 ಗಂಟೆಯವರೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಹಾಗೂ ದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಅತಿಥಿಗೃಹಕ್ಕೆ ಮರಳಲಿದ್ದಾರೆ.
ಬಳಿಕ ಕೊಲ್ಲೂರಿನಿಂದ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ 12.30ರಿಂದ 1 ಗಂಟೆಯವರೆಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಕಾಪುವಿನ ಶ್ರೀ ರಾಜಶ್ರೀ ವಾಸುದೇವ ಶೆಟ್ಟಿ ಅವರ ಮನೆಗೆ ತೆರಳಿ ಭೋಜನ ಸ್ವೀಕರಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಕಾಪುವಿನಿಂದ ಹೊರಟು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಲಿದ್ದು ಅಲ್ಲಿ ಪೂಜೆ ಸಲ್ಲಿಸಿ ವಾಸ್ತವ್ಯ ಹೂಡಲಿದ್ದಾರೆ.
ನವೆಂಬರ್ 17ರ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಧರ್ಮಸ್ಥಳದಿಂದ ಹೊರಟು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
ಸಚಿವರೊಂದಿಗೆ ಅವರ ಪತ್ನಿ, ಪುತ್ರ ಹಾಗೂ ಕುಟುಂಬದ ಸದಸ್ಯರು ಪ್ರವಾಸದಲ್ಲಿ ಭಾಗವಹಿಸಲಿದ್ದಾರೆ.




