Friday, June 26, 2026

ಉತ್ತಮ ವಿದ್ಯಾಭ್ಯಾಸದಿಂದಲೇ ದೇಶ ಸರ್ವೋತ್ಕೃಷ್ಟವಾಗಲು ಸಾಧ್ಯ: ಜಗದ್ಗುರು ಶ್ರೀ ವಿಧುಶೇಖರ ಭಾರತೀ ಶ್ರೀಗಳು

ಕುಂದಾಪುರ: ಭಾರತದಂತಹ ಮಹಾನ್ ದೇಶವು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಈಗಾಗಲೇ ವಿಶ್ವದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಆದರೆ ಎಲ್ಲ ಕ್ಷೇತ್ರಗಳಲ್ಲೂ ಅತ್ಯುನ್ನತ ಸಾಧನೆ ಮಾಡಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವುದು ಅತ್ಯಗತ್ಯ ಎಂದು ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಗುರುವಾರ ಹೆಮ್ಮಾಡಿಯ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಳ್ಸೆಯಲ್ಲಿ ನೂತನವಾಗಿ ನಿರ್ಮಿಸಲಾದ ”ಶ್ಲಾಘನಾ-ಶನಯ’ ನೂತನ ವಿದ್ಯಾರ್ಥಿ ವಸತಿ ನಿಲಯಗಳ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಮನುಷ್ಯನ ಶ್ರೇಷ್ಠ ಶಕ್ತಿಯೇ ಬುದ್ಧಿಶಕ್ತಿ. ಆ ಬುದ್ಧಿಯ ಸಮಗ್ರ ವಿಕಾಸಕ್ಕೆ ಶಿಕ್ಷಣವೇ ಮೂಲಾಧಾರವಾಗಿದೆ ಎಂದರು.

ಭಾರತದ ಮಕ್ಕಳಲ್ಲಿ ಅಪಾರ ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಬೆಳೆಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ. ವಿದ್ಯಾರ್ಥಿಗಳ ಪ್ರತಿಭೆ ಹೊರಹೊಮ್ಮಿ ಸಮಾಜ, ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು. ಭಗವಂತ ನೀಡಿರುವ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದು ಶ್ರೀಗಳು ಕರೆ ನೀಡಿದರು.

ಜನತಾ ಶಿಕ್ಷಣ ಸಂಸ್ಥೆಯು ಸಣ್ಣ ಪ್ರಯತ್ನದಿಂದ ಆರಂಭಗೊಂಡು ಇಂದು ಮಹತ್ವದ ಶಿಕ್ಷಣ ಕೇಂದ್ರವಾಗಿ ರೂಪುಗೊಂಡಿರುವುದು ಶ್ಲಾಘನೀಯ. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಅವಕಾಶ ಕಲ್ಪಿಸಿರುವ ಈ ಸಂಸ್ಥೆ ಮತ್ತಷ್ಟು ಬೆಳೆಯಲಿ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಉತ್ತಮ ವಸತಿ ಹಾಗೂ ಆಹಾರ ವ್ಯವಸ್ಥೆ ಒದಗಿಸಲು ನಿರ್ಮಿಸಿರುವ ವಸತಿ ನಿಲಯವು ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ಮೊಗವೀರ ಹಾಗೂ ಕಾರ್ಯದರ್ಶಿ ಶ್ಯಾಮಲಾ ಗಣೇಶ್ ದಂಪತಿ ಜಗದ್ಗುರುಗಳ ಪಾದಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿವಿವಿ‌ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ. ಕುಂದರ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಶಿಕ್ಷಣ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಮತ್ತು ವಿದ್ಯಾಭಿಮಾನಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿನಿಯರಾದ ಸಿಂಚನಾ ಜಿ. ಭಟ್ ಹಾಗೂ ಸಮೃದ್ಧಿ ಶೆಟ್ಟಿ ಅವರು ಆದಿ ಶಂಕರಾಚಾರ್ಯರ ಜೀವನ ಹಾಗೂ ಕೊಡುಗೆಗಳ ಕುರಿತು ಮಾತನಾಡಿದರು.

ಶೃಂಗೇರಿ ಪೀಠದ ಪ್ರಾಂತೀಯ ಧರ್ಮಾಧಿಕಾರಿ ವೇ.ಮೂ. ಲೋಕೇಶ್ ಅಡಿಗ ಬಡಾಕೆರೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪನ್ಯಾಸಕ ಉದಯ ನಾಯ್ಕ್ ಸ್ವಾಗತಿಸಿದರು. ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

More like this
Related

ಗ್ರಾಹಕ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಆರೋಪ:  ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ

ಉಡುಪಿ: ಗ್ರಾಹಕ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದೇ ಇದ್ದ ಆರೋಪದ ಹಿನ್ನೆಲೆಯಲ್ಲಿ...

ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್

ಉಡುಪಿ: ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹ ಫಲನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು...

ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಕುಂದಾಪುರ: ಮುಂಬೈನಲ್ಲಿ ನಡೆದ 19ನೇ ಮುಂಬೈ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ...

ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಜಿರ್ಣೋದ್ದಾರ ಶಿಲಾನ್ಯಾಸ

ಹಿರಿಯಡ್ಕ: ಇಲ್ಲಿನ ಹಿರೇಬೆಟ್ಟು ಭಟ್ರಕೋಡಿಯಲ್ಲಿನ ಗ್ರಾಮದ ದೇವರಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...

Copying is disabled on Udupi Digital News.