ಉಡುಪಿ: ಜಿಲ್ಲೆಯ ಬ್ರಹ್ಮಾವರ ಸಮೀಪ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಗುರುವಾರ, ಆಗಸ್ಟ್ 20ರ ಬೆಳಗ್ಗೆ ನಡೆದಿದೆ.
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಡಿಸಿ ಬಾಕ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ನಿರ್ವಾಹಕರು ಪ್ರಯಾಣಿಕರನ್ನು ಕೆಳಗಿಳಿಸಿದ್ದು, ಅವರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




