ಉಡುಪಿ: ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ಹಾಗೂ ಹೋರಾಟದ ಪ್ರಮುಖ ಹಂತದಲ್ಲಿದ್ದೇವೆ. ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಕರಾವಳಿ ಭಾಗಕ್ಕೆ ಸಾಕಷ್ಟು ಅನುಕೂಲವಾಗಲಿದೆ. ವಕೀಲರು ಮತ್ತು ಕಕ್ಷಿದಾರರಿಗೆ ಮಾತ್ರವಲ್ಲದೆ, ಜನಸಾಮಾನ್ಯರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೂ ಇದರಿಂದ ಪ್ರಯೋಜನವಾಗಲಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಯು-ಆ್ಯಕ್ಟ್ ಸಮಿತಿ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಉಡುಪಿಯ ಎಂಜಿಎಂ ರವೀಂದ್ರ ಮಂಟಪದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ವಿವಿಧ ಸಂಘ-ಸಂಸ್ಥೆಗಳ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಕಕ್ಷಿದಾರರ ಪ್ರಯಾಣ ಹಾಗೂ ಕಾನೂನು ಹೋರಾಟದ ವೆಚ್ಚ ಕಡಿಮೆಯಾಗಲಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯಲಿದೆ. ನ್ಯಾಯಾಲಯದ ವ್ಯಾಪ್ತಿಯನ್ನು ಸಮರ್ಪಕವಾಗಿ ನಿರ್ಧರಿಸಿ ಜನರಿಗೆ ಸುಲಭವಾಗಿ ನ್ಯಾಯ ದೊರೆಯುವ ವ್ಯವಸ್ಥೆ ರೂಪಿಸಬೇಕು ಎಂದು ಅವರು ಹೇಳಿದರು.
ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯೆ ಶ್ಯಾಮಲಾ ಭಂಡಾರಿ ಮಾತನಾಡಿ, ಕರಾವಳಿಗೆ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದಕ್ಕೆ ಕೆಲವೊಂದು ಲಾಬಿಗಳು ಅಡ್ಡಿಯಾಗುತ್ತಿವೆ. ಅವುಗಳನ್ನು ಮೆಟ್ಟಿ ನಿಲ್ಲಲು ಜನಪ್ರತಿನಿಧಿಗಳು, ವಕೀಲರು ಹಾಗೂ ಸಾರ್ವಜನಿಕರು ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಸರಕಾರ, ಮುಖ್ಯ ನ್ಯಾಯಮೂರ್ತಿ ಹಾಗೂ ಜನಪ್ರತಿನಿಧಿಗಳಿಗೆ ಕರಾವಳಿಗೆ ಹೈಕೋರ್ಟ್ ಪೀಠದ ಅಗತ್ಯ ಏಕೆ ಇದೆ ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಮಾತನಾಡಿ, ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಬೇಕು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಅನುಕೂಲವಾಗುವ ಮಧ್ಯಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸವಿತಾ ಕೊರಗ ಮಾತನಾಡಿ, ಬುಡಕಟ್ಟು ಸಮುದಾಯವಾಗಿರುವ ಕೊರಗರು ಹಲವು ವರ್ಷಗಳಿಂದ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದಾರೆ. ಕರಾವಳಿಯಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ನಮ್ಮ ಸಮುದಾಯಕ್ಕೆ ಸಾಂವಿಧಾನಿಕ ಹಕ್ಕುಗಳ ಸಮರ್ಪಕ ಲಾಭ ದೊರೆಯಲಿದ್ದು, ನ್ಯಾಯದ ವ್ಯವಸ್ಥೆ ಮತ್ತಷ್ಟು ಜನಸ್ನೇಹಿಯಾಗಲಿದೆ ಎಂದು ಹೇಳಿದರು.
ಮನೋವೈದ್ಯ ಡಾ. ಪಿ.ವಿ. ಭಂಡಾರಿ ಮಾತನಾಡಿ, ಉಡುಪಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿನ ವಿಚಾರದಲ್ಲಿ ಆದಂತೆ ಹೈಕೋರ್ಟ್ ಪೀಠದ ವಿಚಾರದಲ್ಲೂ ಅನ್ಯಾಯವಾಗಿದೆ. ಈ ಅನ್ಯಾಯವನ್ನು ಸರಿಪಡಿಸಲು ಹೋರಾಟ ನಡೆಸುವುದೊಂದೇ ದಾರಿ ಎಂದು ಅಭಿಪ್ರಾಯಪಟ್ಟರು.
ಕರಾವಳಿಯ ಮೂರು ಜಿಲ್ಲೆಗಳ ನ್ಯಾಯಾಲಯಗಳಲ್ಲಿ ಲಕ್ಷಾಂತರ ದಾವೆಗಳು ಇತ್ಯರ್ಥವಾಗುತ್ತಿವೆ. ಅವುಗಳಲ್ಲಿ ಸಾವಿರಾರು ಮಂದಿ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗದೆ ನ್ಯಾಯದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರಾವಳಿಗೆ ಹೈಕೋರ್ಟ್ ಪೀಠದ ಅಗತ್ಯ ಅತ್ಯಂತ ಹೆಚ್ಚಾಗಿದೆ ಎಂದು ನ್ಯಾಯವಾದಿ ಪ್ರೇಂ ಪ್ರಸಾದ್ ಶೆಟ್ಟಿ ಹೇಳಿದರು.
ಹೋರಾಟವನ್ನು ಇಡೀ ಜಿಲ್ಲೆಗೆ ವಿಸ್ತರಿಸುವ ಉದ್ದೇಶದಿಂದ ಮುಂದಿನ 15 ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುವುದು. ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಬೇಕು ಹಾಗೂ ವಿದ್ಯಾರ್ಥಿಗಳಲ್ಲೂ ಈ ಹೋರಾಟದ ಕುರಿತು ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಹಿರಿಯ ಪತ್ರಕರ್ತ ನಿತ್ಯಾನಂದ ಪಡ್ರೆ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಶ್ರೀನಾಥ್ ರಾವ್, ಕಾರ್ಕಳ ವಕೀಲರ ಸಂಘದ ಉಪಾಧ್ಯಕ್ಷ ಹರೀಶ್ ಅಧಿಕಾರಿ, ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಬೈಂದೂರು ವಕೀಲರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಮಾತನಾಡಿದರು.
ನ್ಯಾಯವಾದಿ ಪ್ರೇಂ ಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ್ ಕಾಮತ್ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು. ವಿಜಯ ಡಿಸೋಜ ವಂದಿಸಿದರು.




