ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಇದೇ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 3, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿದೆ.
ಈ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಜಿಲ್ಲಾಡಳಿತ ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದ್ದು, ನೀರು ನಿಂತಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ಪಾಲಕರು ವಿಶೇಷ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.
ಅದೇ ರೀತಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರ ಮತ್ತು ಸಮುದ್ರ ತೀರಗಳಿಗೆ ಭೇಟಿ ನೀಡುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಸೂಚಿಸಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವುದರೊಂದಿಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ನಿರ್ದೇಶಿಸಲಾಗಿದೆ.
ಇದಲ್ಲದೆ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ಅಗತ್ಯ ಸನ್ನದ್ಧತೆ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.




