Monday, September 14, 2026

ಪರಶುರಾಮ ಥೀಮ್ ಪಾರ್ಕ್ ತಾಮ್ರದ ಹೊದಿಕೆ ಕಳವು: ಇಬ್ಬರ ಬಂಧನ, ₹2.18 ಲಕ್ಷ ಮೌಲ್ಯದ ಸೊತ್ತು ವಶ

ಕಾರ್ಕಳ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹2.18 ಲಕ್ಷ ಮೌಲ್ಯದ ಕಳವುಗೊಳಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಳವಾರು ನಿವಾಸಿ ಆರೀಫ್ @ಮುನ್ನ (37) ಮತ್ತು ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಎಂದು ಗುರುತಿಸಲಾಗಿದೆ.

ದಿನಾಂಕ 03-01-2026ರಂದು ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮುಖ್ಯ ಬಾಗಿಲನ್ನು ಯಾವುದೋ ಸಾಧನದಿಂದ ಮೀಟಿ ತೆರೆದು ಒಳಪ್ರವೇಶಿಸಿದ ದುಷ್ಕರ್ಮಿಗಳು, ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ ತಾಮ್ರದ ಹೊದಿಕೆಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ದಾಖಲಾಗಿದ್ದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 2023ರ ಕಲಂ 331(3), 331(4), 305ರಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಪರಿಗಣಿಸಿದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರೀರಾಂ ಶಂಕರ ಐಪಿಎಸ್ ಅವರ ನಿರ್ದೇಶನದಂತೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ವಿಶೇಷ ತಂಡಗಳು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ತನಿಖೆ ನಡೆಸಿ ಖಚಿತ ಮಾಹಿತಿ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ.

ಬಂಧಿತ ಆರೋಪಿಗಳಾದ ಆರೀಫ್ @ಮುನ್ನ ವಿರುದ್ಧ ಪಡುಬಿದ್ರೆ, ಉಡುಪಿ ನಗರ, ಬ್ರಹ್ಮಾವರ, ಕಾರ್ಕಳ ಗ್ರಾಮಾಂತರ ಹಾಗೂ ಮೂಲ್ಕಿ–ಮೂಡಬಿದ್ರೆ ಠಾಣೆಗಳಲ್ಲಿ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹಾಗೂ ಅಬ್ದುಲ್ ಹಮೀದ್ ವಿರುದ್ಧ ಬಂಟ್ವಾಳ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಬಂಧಿತ ಆರೋಪಿಗಳಿಂದ 51 ಕೆ.ಜಿ ತೂಕದ ತಾಮ್ರದ ಹೊದಿಕೆ (ಅಂದಾಜು ಮೌಲ್ಯ ₹45,000), ಎರಡು ಸೀಲಿಂಗ್ ಫ್ಯಾನ್ಗಳು (₹1,200), ಕೃತ್ಯಕ್ಕೆ ಬಳಸಿದ್ದ KA-35-A-3870 ಸಂಖ್ಯೆಯ ಏಪ್ ಗೂಡ್ಸ್ ಆಟೋ ರಿಕ್ಷಾ (ಅಂದಾಜು ಮೌಲ್ಯ ₹1,00,000) ಹಾಗೂ KA-19-HV-9410 ಸಂಖ್ಯೆಯ ಹೀರೋ ಕಂಪನಿಯ ಮೋಟಾರ್ ಸೈಕಲ್ (ಅಂದಾಜು ಮೌಲ್ಯ ₹70,000) ಸೇರಿ ಒಟ್ಟು ₹2,18,200 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಈ ಕಾರ್ಯಾಚರಣೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀ ಹರೀರಾಂ ಶಂಕರ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀ ಸುಧಾಕರ ನಾಯ್ಕ ಅವರ ಮಾರ್ಗದರ್ಶನದಲ್ಲಿ, ಕಾರ್ಕಳ ಉಪವಿಭಾಗದ ಪ್ರಭಾರ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ಅವರ ನೇತೃತ್ವದಲ್ಲಿ ನಡೆಸಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್, ಪಿಎಸ್ಐ ಮುರುಳೀಧರ ನಾಯ್ಕ, ಶಿವಕುಮಾರ್ ಎಸ್.ಆರ್, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನಕುಮಾರ್ ಎಂ.ಎಸ್, ಪಿಎಸ್ಐ ಸುಂದರ ಹಾಗೂ ಸಿಬ್ಬಂದಿ ಮತ್ತು ಜಿಲ್ಲಾ ಆರ್ಡಿಸೆಲ್ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.