ಡೆಹ್ರಾಡೂನ್ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿ ನಗರ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಹುಲ್ ಗಾಂಧಿ ನೀಡಿದ ಹೇಳಿಕೆಗಳು ಪರಿಶಿಷ್ಟ ಜಾತಿ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿ, ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಅಮಿತ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಆಗಸ್ಟ್ 8ರಂದು ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದಿತ್ತು. ಇದರ ಬಳಿಕ, ಆಗಸ್ಟ್ 11ರಂದು ಕೆಲವರು ಇದೇ ಮೈದಾನದಲ್ಲಿ ಶುದ್ಧೀಕರಣ ಯಜ್ಞ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದು ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು.
ಈ ಘಟನೆ ಕುರಿತು ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, ಆಗಸ್ಟ್ 29ರಂದು ಹೊಸದಿಲ್ಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ‘ಶುದ್ಧೀಕರಣ’ ನಡೆಸಿದವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಎಫ್ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದ್ದರು.
ಈ ಹೇಳಿಕೆಯ ವಿರುದ್ಧ ಜವಾಹರ್ ನಗರದ ನಿವಾಸಿ ಹಾಗೂ ಶ್ರೀರಾಮ್ ಸೇನಾ ಧರ್ಮಾರ್ಥ ಸೇವಾ ನ್ಯಾಸದ ಸದಸ್ಯ ಅಮಿತ್ ಕುಮಾರ್ ಅವರು ಹಲ್ದ್ವಾನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಗಸ್ಟ್ 11ರಂದು ನಡೆದ ಧಾರ್ಮಿಕ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ತಾವು ಉಪಸ್ಥಿತರಿದ್ದುದಾಗಿ ತಿಳಿಸಿರುವ ಅವರು, ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಸೇರಿದಂತೆ ಸಮಾಜದ ವಿವಿಧ ವರ್ಗಗಳ ಜನರು ಭಾಗವಹಿಸಿದ್ದರು ಎಂದು ಹೇಳಿದ್ದಾರೆ. ಅಲ್ಲದೆ, ಈ ಕಾರ್ಯಕ್ರಮಕ್ಕೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜಾತಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಾವು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿದ್ದು, ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡಿದ್ದವರನ್ನು ಅಸ್ಪೃಶ್ಯತೆ ಆಚರಿಸುವವರು ಹಾಗೂ ದಲಿತ ವಿರೋಧಿಗಳು ಎಂದು ರಾಹುಲ್ ಗಾಂಧಿ ಬಿಂಬಿಸಿದ್ದಾರೆ ಎಂದು ಅಮಿತ್ ಕುಮಾರ್ ಆರೋಪಿಸಿದ್ದಾರೆ.
ಈ ದೂರಿನ ಆಧಾರದ ಮೇಲೆ, ವಿವಿಧ ಸಮುದಾಯಗಳ ನಡುವೆ ದ್ವೇಷ ಪ್ರಚೋದನೆ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶಪೂರ್ವಕ ಕೃತ್ಯಗಳಿಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ -1989ರ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದೆ. ದಕ್ಷಿಣಏಷ್ಯಾದ ಸಂಸ್ಕೃತಿಯನ್ನು ಅನ್ವೇಷಿಸುವುದು
ಶುದ್ಧೀಕರಣದ ಘಟನೆ ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಆದರೆ, ಖರ್ಗೆ ಅವರ ಸಮಾವೇಶದ ಬಳಿಕ ಸ್ಥಳದಲ್ಲಿ ತ್ಯಾಜ್ಯ ಬಿದ್ದಿತ್ತು ಹಾಗೂ ಧಾರ್ಮಿಕ ಸ್ಥಳಕ್ಕೆ ಸೂಕ್ತವಲ್ಲದ ಘೋಷಣೆಗಳನ್ನು ಕೂಗಲಾಗಿತ್ತು. ಹೀಗಾಗಿ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು ಎಂದು ಬಿಜೆಪಿ ಸಮರ್ಥಿಸಿಕೊಂಡಿತ್ತು.




