ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸ್ ದೌರ್ಜನ್ಯ ಹಾಗೂ ಪೊಲೀಸರ ಮೇಲಿನ ದಾಳಿಯ ಆರೋಪಗಳ ಕುರಿತು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವ ಸಾಧ್ಯತೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ. ಅಲ್ಲದೆ, ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ್ ಅವರಿದ್ದ ಪೀಠವು, ಅರ್ಜಿದಾರರು ಸಲ್ಲಿಸಿರುವ ಆರೋಪಗಳು ಪ್ರಾಥಮಿಕವಾಗಿ ನ್ಯಾಯಸಮ್ಮತ ಹಾಗೂ ಸ್ವತಂತ್ರ ತನಿಖೆಗೆ ಅರ್ಹವಾಗಿವೆ ಎಂದು ಅಭಿಪ್ರಾಯಪಟ್ಟಿದ್ದು, ಕೇಂದ್ರ ಸರ್ಕಾರ ಹಾಗೂ ಅಸ್ಸಾಂ, ಬಿಹಾರ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಗಳ ಜೊತೆಗೆ, ಪ್ರತಿಭಟನೆ ವೇಳೆ ಪೊಲೀಸರ ಮೇಲೂ ದಾಳಿ ನಡೆದಿರುವ ವಿಚಾರಗಳ ಬಗ್ಗೆ ಸಮಗ್ರ ಹಾಗೂ ಪಾರದರ್ಶಕ ತನಿಖೆ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.
ಪ್ರತಿಭಟನೆ ವೇಳೆ ವಿವಿಧ ರಾಜ್ಯಗಳಲ್ಲಿ ವಶಕ್ಕೆ ಪಡೆಯಲಾದ ಎಲ್ಲಾ ಅಪ್ರಾಪ್ತರನ್ನು ತಕ್ಷಣ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಹಾಗೆಯೇ, ಕೇವಲ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರಣಕ್ಕೆ ಬಂಧಿತರಾಗಿರುವ ಅಥವಾ ವಶದಲ್ಲಿರುವ ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದೆ.
ಆದರೆ, ಅಪರಾಧ ಹಿನ್ನೆಲೆ ಹೊಂದಿರುವವರಿಗೆ ಈ ರಕ್ಷಣೆಯು ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ, ಮುಂದಿನ ಆದೇಶದವರೆಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿದೆ.
ಪ್ರತಿಭಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ, ಡ್ರೋನ್ ಚಿತ್ರೀಕರಣ, ಬಾಡಿ-ವೋರ್ನ್ ಕ್ಯಾಮೆರಾ ದೃಶ್ಯಗಳು, ವೈರ್ಲೆಸ್ ಸಂವಹನ ದಾಖಲೆಗಳು, ಪಿಸಿಆರ್ ಲಾಗ್ಗಳು ಹಾಗೂ ಇತರೆ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸಂರಕ್ಷಿಸುವಂತೆ ನ್ಯಾಯಾಲಯ ಸೂಚಿಸಿದೆ. ಪ್ರತಿಭಟನಾಕಾರರ ವೈಯಕ್ತಿಕ ಮಾಹಿತಿ ಹಾಗೂ ಡಿಜಿಟಲ್ ಡೇಟಾವನ್ನು ಸುರಕ್ಷಿತವಾಗಿ ಕಾಯ್ದಿರಿಸಬೇಕು, ಆದರೆ ಸದ್ಯಕ್ಕೆ ಸಾರ್ವಜನಿಕ ವಲಯಕ್ಕೆ ಬಿಡುಗಡೆ ಮಾಡಬಾರದು ಎಂದೂ ಆದೇಶಿಸಿದೆ.
ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಪ್ರತಿಕ್ರಿಯೆ ಪಡೆದ ಬಳಿಕ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಕುರಿತು ಪರಿಶೀಲಿಸಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.
ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೇಶದಲ್ಲಿ ಜಾರಿಯಲ್ಲಿರುವ ಮಾರ್ಗಸೂಚಿಗಳಲ್ಲಿಯೂ ಬದಲಾವಣೆ ಅಗತ್ಯವಾಗಬಹುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. “ಪ್ರಜಾಪ್ರಭುತ್ವದಲ್ಲಿ ಇಂತಹ ಪ್ರತಿಭಟನೆಗಳು ಸಹಜ. ಇಂತಹ ಸಂದರ್ಭಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆ ಇರಬೇಕು” ಎಂದು ನ್ಯಾಯಪೀಠ ಹೇಳಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರಾದ ಗೋಪಾಲ್ ಶಂಕರನಾರಾಯಣನ್, ಶ್ಯಾಮ್ ದಿವಾನ್, ಶಾದನ್ ಫರಾಸತ್, ಪ್ರಶಾಂತ್ ಭೂಷಣ್ ಹಾಗೂ ಎನ್. ಹರಿಹರನ್ ಅವರು ವಿವಿಧ ರಾಜ್ಯಗಳಲ್ಲಿ ನಡೆದ ಪೊಲೀಸ್ ದೌರ್ಜನ್ಯ, ಅಪ್ರಾಪ್ತರ ಬಂಧನ, ವಕೀಲರ ಮೇಲಿನ ಹಲ್ಲೆ ಹಾಗೂ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು.
ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸ್ವತಂತ್ರ ತನಿಖೆಗೆ ಬೆಂಬಲ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದ್ದರೆ ಅದು ಗಂಭೀರ ವಿಷಯವಾಗಿದ್ದು ಸರ್ಕಾರ ಅದನ್ನು ಲಘುವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ ಅವರು, ಪ್ರತಿಭಟನೆ ವೇಳೆ ಸುಮಾರು 250 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಪ್ರತಿಭಟನೆಗೆ ಸಮಾಜಘಾತಕ ಶಕ್ತಿಗಳು ನುಸುಳಿರುವ ಸಾಧ್ಯತೆಯಿದ್ದು, ಪೊಲೀಸರ ಮೇಲಿನ ದಾಳಿಗೆ ವಿದ್ಯಾರ್ಥಿಗಳೇ ಕಾರಣವೇ ಎಂಬುದನ್ನೂ ಪರಿಶೀಲಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಶಾಂತಿಯುತ ಪ್ರತಿಭಟನೆ ನಡೆಸುವುದು ಸಂವಿಧಾನಾತ್ಮಕ ಹಕ್ಕಾಗಿದ್ದು, ಪೊಲೀಸ್ ದೌರ್ಜನ್ಯ ಹಾಗೂ ಪೊಲೀಸರ ಮೇಲಿನ ಹಿಂಸಾಚಾರದ ಆರೋಪಗಳೆರಡನ್ನೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂಬ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ.




