Saturday, October 17, 2026

ದೆಹಲಿಯಲ್ಲಿ ಪ್ರತಿಭಟನೆಗೆ ಬ್ರೇಕ್: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ನೇಹಾ ಬೋರಾ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿ ನಿಗದಿಯಾಗಿದ್ದ ಪ್ರತಿಭಟನೆ ಹಾಗೂ ‘ಲೆಹ್ರಾ ದೋ ತಿರಂಗಾ’ ರ್ಯಾಲಿಗೂ ಮುನ್ನ ರಾಜಧಾನಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ, ವಶಕ್ಕೆ ಪಡೆದಿದ್ದ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಿಜೆಪಿ ವತಿಯಿಂದ ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜ ಪ್ರದರ್ಶನದೊಂದಿಗೆ ಪ್ರತಿಭಟನಾ ಮೆರವಣಿಗೆ ಆಯೋಜಿಸಲು ಕರೆ ನೀಡಲಾಗಿತ್ತು. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂದಾದ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಭಿಜಿತ್ ದೀಪ್ಕೆ ಅವರನ್ನು ವಶಕ್ಕೆ ಪಡೆದ ಬಳಿಕ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬಂಧನ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಅವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ವರದಿಯಾಗಿದೆ. ಇನ್ನೊಂದೆಡೆ, ದೆಹಲಿ ಪೊಲೀಸ್ ಕಾಯಿದೆಯ ಸೆಕ್ಷನ್ 65ರ ಅಡಿಯಲ್ಲಿ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಎಐಎಸ್‌ಎ ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರನ್ನು ಬಂಧಿಸಿರುವ ಕ್ರಮಕ್ಕೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ನಾಗರಿಕರ ಸಾಂವಿಧಾನಿಕ ಹಕ್ಕು ಎಂದು ಅವರು ಪ್ರತಿಪಾದಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪ್ರತಿಭಟನಾ ಸ್ಥಳಗಳಲ್ಲಿ ದೆಹಲಿ ಪೊಲೀಸರು ಹಾಗೂ ಕ್ಷಿಪ್ರ ಕಾರ್ಯಪಡೆ (RAF) ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

More like this
Related

ದಸರಾ ವೇಳೆ ಬಲೂನ್ ಮಾರುತ್ತಿದ್ದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ

ಮೈಸೂರು: ಕಳೆದ ವರ್ಷದ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಒಂಬತ್ತು ವರ್ಷದ...

MRPL ನಲ್ಲಿ ಸ್ಫೋಟ ಪ್ರಕರಣ: ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ಮೃತ್ಯು

ಸುರತ್ಕಲ್: ಇಲ್ಲಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಸೆ.30ರಂದು...

ತೆರೆಯ ಮೇಲೆ ಮೋಡಿ ಮಾಡಿದ ಸೀಗೆಗುಡ್ಡ: ‘ಪ್ರೇಮದ ಊರಲಿ’ ಎಫೆಕ್ಟ್‌ನಿಂದ ಪ್ರವಾಸಿ ತಾಣಕ್ಕೆ ಹೊಸ ಕಳೆ!

ಹಾಸನ: ಹಚ್ಚ ಹಸಿರಿನ ಬೆಟ್ಟಗಳು, ಮಂಜು ಮುಸುಕಿದ ಪರಿಸರ, ತಂಪಾದ ಗಾಳಿ,...

‘ಹರ್ ಘರ್ ತಿರಂಗಾ’ ಘೋಷಣೆ ಎಲ್ಲಿ ಹೋಯಿತು? ಮೋದಿ ಸರ್ಕಾರಕ್ಕೆ ಪ್ರಕಾಶ್ ರಾಜ್ ಪ್ರಶ್ನೆ

ನವದೆಹಲಿ: ರಾಷ್ಟ್ರಧ್ವಜ ಹಿಡಿದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾದ ಯುವಕರನ್ನು ಬಂಧಿಸಿರುವ...

Copying is disabled on Udupi Digital News.