ಸಾಗರ್ (ಮಧ್ಯಪ್ರದೇಶ): ಕಳ್ಳಭಟ್ಟಿ ಮದ್ಯ ಸೇವಿಸಿದ ಶಂಕೆಯಲ್ಲಿ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ಸುಮಾರು 35 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಸ್ವಸ್ಥರನ್ನು ಸಾಗರ್‌ನ ಬುಂದೇಲ್‌ಖಂಡ್ ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥರಲ್ಲಿ ಕೆಲವರಿಗೆ ದೇಹ ನೀಲಿ ಬಣ್ಣಕ್ಕೆ ತಿರುಗುವುದು ಹಾಗೂ ಸ್ನಾಯುಗಳು ಬಿಗಿಯಾಗುವಂತಹ ಗಂಭೀರ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ಮಾತನಾಡಿ, ಬೆಳಗ್ಗೆಯಿಂದಲೇ ಅಕ್ರಮ ಮದ್ಯ ಸೇವನೆಯಿಂದ ಅನಾರೋಗ್ಯ ಹಾಗೂ ಸಾವು ಸಂಭವಿಸಿರುವ ಬಗ್ಗೆ ವರದಿಗಳು ಬಂದಿದ್ದು, ಸಿವಿಲ್ ಆಸ್ಪತ್ರೆಯಲ್ಲಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನೌರಾ ಹಾಗೂ ಘುಗ್ರು ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೈದ್ಯಕೀಯ ತಂಡಗಳು ಹಾಗೂ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಮದ್ಯ ಸೇವಿಸಿರುವ ಶಂಕೆಯಿರುವವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಕಳೆದ 24ರಿಂದ 48 ಗಂಟೆಗಳ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಸೇವಿಸಿರುವವರು ಅಥವಾ ಅನಾರೋಗ್ಯದ ಲಕ್ಷಣಗಳು ಕಂಡುಬಂದವರು ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಗಾಗುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಪ್ರದೇಶದಲ್ಲಿರುವ ಆರು ಮದ್ಯದಂಗಡಿಗಳನ್ನು ಸೀಲ್ ಮಾಡಲಾಗಿದ್ದು, ಶಂಕಿತ ಮದ್ಯದ ಮಾದರಿಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಾಗರ್ ವಿಭಾಗದ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ನೌರಾ ಹಾಗೂ ಘುಗ್ರು ಖುರ್ದ್ ಗ್ರಾಮಗಳಿಗೆ ಭೇಟಿ ನೀಡಿ, ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಕುರಿತು ಮಾಹಿತಿ ಪಡೆದು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಶಂಕಿತ ಕಳ್ಳಭಟ್ಟಿ ಮದ್ಯದ ಮೂಲ ಹಾಗೂ ಅದರ ಪೂರೈಕೆಯಲ್ಲಿ ಭಾಗಿಯಾಗಿರುವವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಮರಣಕ್ಕೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದುಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮದ್ಯ ಸೇವಿಸಿದ ಬಳಿಕ ವಾಂತಿ, ತಲೆನೋವು, ಜ್ವರ ಸೇರಿದಂತೆ ಯಾವುದೇ ಲಕ್ಷಣಗಳು ಕಂಡುಬಂದರೆ ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಾಗರ್ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ.




