ನವದೆಹಲಿ: ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಆದರೆ, ರಾಹುಲ್ ಗಾಂಧಿ ಸುರಕ್ಷಿತವಾಗಿದ್ದಾರೆ.
ಹಲಿಯಾಪುರ ಪ್ರದೇಶದ 91ನೇ ಕಿಲೋಮೀಟರ್ ಮೈಲಿಗಲ್ಲಿನ ಸಮೀಪ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬೆಂಗಾವಲು ಪಡೆಯ ಐದು ವಾಹನಗಳು ಹಾಗೂ ಒಂದು ಆಂಬುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಪಕ್ಷದ ಕಾರ್ಯಕರ್ತರು, ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ರಾಹುಲ್ ಗಾಂಧಿ ಸೋಮವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಸುಲ್ತಾನ್‌ಪುರದ ವಿಶೇಷ ಸಂಸದ-ಶಾಸಕರ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. ಅಮಿತ್ ಶಾ ಅವರು ಈ ಹಿಂದೆ ಬಿಜೆಪಿ ಅಧ್ಯಕ್ಷರಾಗಿದ್ದು, ಪ್ರಸ್ತುತ ಕೇಂದ್ರ ಗೃಹ ಸಚಿವರಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಲಿದೆ. ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವುದು ಕಡ್ಡಾಯವಾಗಿದೆ ಎಂದು ದೂರುದಾರರ ಪರ ವಕೀಲ ಸಂತೋಷ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶುಭಂ ವರ್ಮಾ ಅವರು ಈ ಹಿಂದೆ ಅಕ್ಟೋಬರ್ 13ರಂದು ತೀರ್ಪು ಪ್ರಕಟಿಸುವುದಾಗಿ ನಿಗದಿಪಡಿಸಿದ್ದರು.
ಸುಲ್ತಾನ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ಅವರ ಪ್ರಕಾರ, ನಿಗದಿತ ಕಾರ್ಯಕ್ರಮದಂತೆ ರಾಹುಲ್ ಗಾಂಧಿ ಲಖನೌದಿಂದ ರಸ್ತೆ ಮಾರ್ಗವಾಗಿ ಸುಲ್ತಾನ್‌ಪುರಕ್ಕೆ ಪ್ರಯಾಣಿಸಿ ಬೆಳಗ್ಗೆ ಸುಮಾರು 10 ಗಂಟೆಗೆ ತಲುಪುವ ನಿರೀಕ್ಷೆಯಿತ್ತು.
ನ್ಯಾಯಾಲಯದ ಆವರಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆ ಕಾಪಾಡಲು ಪೊಲೀಸರು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ವಿಚಾರಣೆ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ನಿರೀಕ್ಷೆಯಿದೆ.
ಈ ಮಾನನಷ್ಟ ಮೊಕದ್ದಮೆ 2018ರ ಆಗಸ್ಟ್ 4ರಂದು ದಾಖಲಾಯಿತು. ಸುಲ್ತಾನ್‌ಪುರ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಅಮಿತ್ ಶಾ ಕುರಿತು ರಾಹುಲ್ ಗಾಂಧಿ ನೀಡಿದ್ದರೆನ್ನಲಾದ ಹೇಳಿಕೆಗಳ ವಿರುದ್ಧ ದೂರು ದಾಖಲಿಸಿದ್ದರು.
2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಈ ಹೇಳಿಕೆಗಳನ್ನು ನೀಡಲಾಗಿತ್ತು ಎನ್ನಲಾಗಿದೆ.
ಅಂದಿನಿಂದ ಈ ಪ್ರಕರಣದ ವಿಚಾರಣೆ ಸುಲ್ತಾನ್‌ಪುರದ ವಿಶೇಷ ಸಂಸದ-ಶಾಸಕರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ತೀರ್ಪು ಪ್ರಕಟಿಸಲು ದಿನಾಂಕ ನಿಗದಿಯಾಗಿದೆ.
ಅಪಘಾತದಲ್ಲಿ ಗಾಯಗೊಂಡವರ ನಿಖರ ಸಂಖ್ಯೆ ಹಾಗೂ ಅವರ ಗಾಯಗಳ ತೀವ್ರತೆ ಸೇರಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.




