ಯುಡಿ ನ್ಯೂಸ್ ಡಾಟ್ ಕಾಮ್
ಮುಂಬೈ: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಬರೋಬ್ಬರಿ 4 ವರ್ಷಗಳ ಬಳಿಕ ಭಾರತ ತಂಡದ ಮಾಜಿ ನಾಯಕ, ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ರನ್ ಮಳೆ ಹರಿಸುತ್ತಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಇದೀಗ ಐಸಿಸಿಯಿಂದಲೂ ಭರ್ಜರಿ ಉಡುಗೊರೆ ಸಿಕ್ಕಿದೆ. ಕಳೆದ ಐದು ಇನ್ನಿಂಗ್ಸ್ಗಳಲ್ಲಿಯೂ 50 ಪ್ಲಸ್ ಇನ್ನಿಂಗ್ಸ್ ಆಡಿರುವ ಕೊಹ್ಲಿ ಇದೀಗ ಏಕದಿನ ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ಶ್ರೇಯಾಂಕದಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದಾರೆ. ಇಷ್ಟು ದಿನ ಈ ಮಾದರಿಯಲ್ಲಿ ಅಗ್ರಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಇದೀಗ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ವಿರಾಟ್ ಕೊಹ್ಲಿ 4 ವರ್ಷ 9 ತಿಂಗಳ ನಂತರ ಮತ್ತೊಮ್ಮೆ ಏಕದಿನ ಕ್ರಿಕೆಟ್ನಲ್ಲಿ ನಂಬರ್ ಒನ್ ಬ್ಯಾಟ್ಸ್ ಮನ್ ಆಗಿದ್ದಾರೆ. ಅಂದರೆ 1736 ದಿನಗಳ ದೀರ್ಘ ಕಾಯುವಿಕೆಯ ನಂತರ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಇದಕ್ಕೂ ಮೊದಲು, ವಿರಾಟ್ ಕೊಹ್ಲಿ ಏಪ್ರಿಲ್ 13, 2021 ರವರೆಗೆ ಏಕದಿನ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದ್ದರು.
ಐಸಿಸಿ ಏಕದಿನ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ 785 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಬ್ಯಾಟ್ಸ್ ಮನ್ ಡ್ಯಾರಿಲ್ ಮಿಚೆಲ್ 784 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಇತ್ತ ರೋಹಿತ್ ಶರ್ಮಾ 775 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಶುಭಮನ್ ಗಿಲ್ ಐದನೇ ಸ್ಥಾನದಲ್ಲಿದ್ದರೆ, ಶ್ರೇಯಸ್ ಅಯ್ಯರ್ 10 ನೇ ಸ್ಥಾನದಲ್ಲಿದ್ದಾರೆ.
4 ವರ್ಷಗಳ ಬಳಿಕ ಏಕದಿನ ಕ್ರಿಕೆಟ್ಗೆ ಕಿಂಗ್ ಕೊಹ್ಲಿ ನಂಬರ್ ವನ್!




