ಬೆಂಗಳೂರು, ಫೆ.24: ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ 1,600ಕ್ಕೂ ಹೆಚ್ಚು ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವವನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ Dr. G. Parameshwara ತಿಳಿಸಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ತರಬೇತಿ ಅಕಾಡಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಹಾಗೂ 40 ಹೊಸ ಅಗ್ನಿಶಾಮಕ ಜಲ ವಾಹನಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.
1,600 ಹುದ್ದೆಗಳ ಭರ್ತಿ
ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಹೆಚ್ಚು ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. 15 ಹೊಸ ತಾಲ್ಲೂಕುಗಳಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಮುಖ್ಯಮಂತ್ರಿಯನ್ನು ಕೋರಲಾಗಿದೆ ಎಂದು ಸಚಿವರು ಹೇಳಿದರು.
ಪೊಲೀಸ್ ಗೃಹ ಮಾದರಿಯಲ್ಲಿ ವಸತಿ
ಪೊಲೀಸ್ ಗೃಹ ಯೋಜನೆಯಡಿ ಈಗಾಗಲೇ 40 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಅದೇ ಮಾದರಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೂ ವಸತಿ ಗೃಹ ಕಲ್ಪಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಆಧುನಿಕ ಉಪಕರಣಗಳ ಸಜ್ಜು
ಬೆಂಗಳೂರಿನಲ್ಲಿ ಬಹುಮಹಡಿ ಕಟ್ಟಡಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗ್ನಿ ಅವಘಡಗಳನ್ನು ನಿಯಂತ್ರಿಸಲು ಆಧುನಿಕ ಹಾಗೂ ಸುಸಜ್ಜಿತ ವಾಹನಗಳನ್ನು ಒದಗಿಸಲಾಗಿದೆ.
ಮೊದಲ ಬಾರಿಗೆ 90 ಮೀಟರ್ ಎತ್ತರ ತಲುಪಬಲ್ಲ ಏರಿಯಲ್ ಲ್ಯಾಡರ್ ಫ್ಲಾಟ್‌ಫಾರ್ಮ್ ಮಾದರಿಯ ಅಗ್ನಿಶಾಮಕ ವಾಹನವನ್ನು ಪರಿಚಯಿಸಲಾಗಿದೆ ಎಂದು ಸಚಿವರು ಹೇಳಿದರು.
15ನೇ ಹಣಕಾಸು ಯೋಜನೆ ಅನುದಾನ
15ನೇ ಹಣಕಾಸು ಯೋಜನೆಯಡಿ 329 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, 21 ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ 98 ಕೋಟಿ ರೂ. ವೆಚ್ಚ ಮಾಡಲಾಗಿದೆ. ಆಧುನಿಕ ಉಪಕರಣಗಳ ಖರೀದಿ ಮತ್ತು ತರಬೇತಿ ಕೇಂದ್ರದ ಉನ್ನತೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಇಲಾಖೆಯ ಸಾಧನೆಗೆ ಪ್ರಶಂಸೆ
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ವಿಪತ್ತು ಸಂದರ್ಭಗಳಲ್ಲಿ ಜೀವಪಣವಾಗಿ ಸಾರ್ವಜನಿಕರ ರಕ್ಷಣೆ ಮಾಡುವಲ್ಲಿ ಇಲಾಖೆ ಮುಂಚೂಣಿಯಲ್ಲಿದೆ ಎಂದು ಸಚಿವರು ಪ್ರಶಂಸಿಸಿದರು.
ಮಡಿಕೇರಿಯಲ್ಲಿ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿ ಒಂಟಿ ಮನೆಗಳಲ್ಲಿದ್ದ ಜನರನ್ನು ರಕ್ಷಿಸಿದ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು.




