ಬೆಂಗಳೂರು, ಮೇ 13: ಕನ್ನಡ ಚಿತ್ರರಂಗಕ್ಕೆ ಮಂಗಳವಾರ ಬೆಳಗ್ಗೆಯೇ ದುಃಖದ ಸುದ್ದಿ ಲಭಿಸಿದೆ. ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ನಸುಕಿನ ಜಾವ ಮನೆಯಲ್ಲಿ ಇದ್ದಾಗಲೇ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ದಿಲೀಪ್ ರಾಜ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ತಾಂತ್ರಿಕರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಅಭಿನಯದ ‘ಮಿಲನ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ದಿಲೀಪ್ ರಾಜ್ ಗಮನಾರ್ಹ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಮೊದಲಾದ ಚಿತ್ರಗಳಲ್ಲಿ ಅವರ ಅಭಿನಯ ಮೆಚ್ಚುಗೆ ಪಡೆದಿತ್ತು.
ಚಿತ್ರರಂಗದ ಜೊತೆಗೆ ಕಿರುತೆರೆಯಲ್ಲೂ ಸಕ್ರಿಯರಾಗಿದ್ದ ಅವರು, ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅಭಿನಯಿಸಿದ್ದರು. ಜೊತೆಗೆ ‘ಪಾರು’ ಹಾಗೂ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ನಿರ್ಮಿಸಿ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.
ದಿಲೀಪ್ ರಾಜ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.




