Saturday, June 13, 2026

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಮಸೂದೆ | ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ


ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರಕಾರದ ಪ್ರಸ್ತಾಪಿತ ‘ಮಲೆಯಾಳಿ ಭಾಷಾ ಮಸೂದೆ-2025’ ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆಕ್ಷೇಪಿಸಿದ್ದಾರೆ.

ಗುರುವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್‍ರನ್ನು ಆಗ್ರಹಿಸುತ್ತೇನೆ. ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮಥ್ರ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ ಎಂದು ಅವರು ಟೀಕಿಸಿದ್ದಾರೆ.

ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕಾಸರಗೋಡು ಜಿಲ್ಲೆಯ ಶೇ.70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದನ್ನು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವಾಗಿದೆ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲಾಗಿದೆ. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾಷೆಯೂ ಸೇರಿದಂತೆ ಅಲ್ಪಸಂಖ್ಯಾತರ ಹಿತರಕ್ಷಣೆಯ ವಿಚಾರದಲ್ಲಿ ನಾವೆಲ್ಲರೂ ಗೌರವಿಸುವ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಸಂವಿಧಾನದ 29 ಮತ್ತು 30ನೇ ಪರಿಚ್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿದೆ. ಅವರಿಗೆ ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸುವ ಹಕ್ಕನ್ನೂ ನೀಡುತ್ತದೆ. ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 350(ಬಿ) ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

More like this
Related

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ...

ಭಾರತದಲ್ಲಿ ಭೀತಿ ಸೃಷ್ಟಿಸಲು ದಾವೂದ್ ಗ್ಯಾಂಗ್‌ನಿಂದ ಟಾರ್ಗೆಟ್ ಹತ್ಯೆಗಳ ಸಂಚು; ಗುಪ್ತಚರ ಸಂಸ್ಥೆಗಳ ಎಚ್ಚರಿಕೆ

ನವದೆಹಲಿ: ದಾವೂದ್ ಇಬ್ರಾಹಿಂ ಸಿಂಡಿಕೇಟ್ ಭಾರತದಲ್ಲಿ ಭೀತಿ ಮತ್ತು ಆತಂಕದ ವಾತಾವರಣ...

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ; ಭದ್ರತೆ ಕಟ್ಟು ನಿಟ್ಟಿನದು

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಕರ್ನಾಟಕದ ಉಡುಪಿ...

ಅಹಮದಾಬಾದ್ ವಿಮಾನ ದುರಂತ: 72 ಗಂಟೆಗಳ ತುರ್ತು ಕಾರ್ಯಾಚರಣೆ, ವಾರಗಳ ಕಾಲ ನಡೆದ ಡಿಎನ್‌ಎ ಗುರುತಿನ ಪ್ರಕ್ರಿಯೆ

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ಮೊದಲ ವರ್ಷದ ಹಿನ್ನೆಲೆಯಲ್ಲಿ, ಅಹಮದಾಬಾದ್...

Copying is disabled on Udupi Digital News.