ಕೋಲಾರ : ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದೆ. ಒಂದು ವೇಳೆ ಇದೇ ರೀತಿ ಮುಂದುವರಿಸಿದ್ದೇ ಆದಲ್ಲಿ, ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಕಾಂಗ್ರೆಸ್ ನವರನ್ನು ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯಲಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಸ್.ಐ.ಆರ್. ವಿಚಾರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತಿರುಗೇಟು ನೀಡಲು ಕೋಲಾರದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ “ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ” ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.
“ಕಾಂಗ್ರೆಸ್ ಪಕ್ಷ ಕೇವಲ ನಮಗಾಗಲಿ ಅಥವಾ ಸರಕಾರಕ್ಕಾಗಲಿ ವಿರೋಧ ಪಕ್ಷವಾಗಿ ಉಳಿದಿಲ್ಲ; ಬದಲಿಗೆ ಇಡೀ ದೇಶಕ್ಕೇ ವಿರೋಧ ಪಕ್ಷವಾಗಿದೆ. ದೇಶದ ವಿರುದ್ಧ ಇರುವವರು ನಮಗೆ ಬೇಕಾಗಿಲ್ಲ. ಪ್ರಸ್ತುತ ದೇಶ ಅತ್ಯಂತ ಸುಭಿಕ್ಷವಾಗಿದೆ” ಎಂದರು.
ದೇಶದಲ್ಲಿ ಶಾಂತಿಯನ್ನು ಕಾಪಾಡಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಬೇಕು ಎಂದು ಕರೆ ನೀಡಿದ ಅವರು, ಎಸ್.ಐ.ಆರ್. ವಿಚಾರವನ್ನು ಮುಂದಿಟ್ಟುಕೊಂಡು ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ನಿಲ್ಲಿಸಬೇಕು. ಕಾಂಗ್ರೆಸ್ ಅರಾಜಕತೆ ಮುಂದುವರಿಸಿದರೆ ಬಿಜೆಪಿ ಕಾರ್ಯಕರ್ತರು ಸುಮ್ಮನಿರುವುದಿಲ್ಲ ಎಂದರು.
ಈ ಪಾದಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಬೈರತಿ ಬಸವರಾಜ ಹಾಗೂ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂ ಶಕ್ತಿ ಚಲಪತಿ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.




