ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿರುವ ನಡುವೆಯೇ, ರಾಜ್ಯದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವುದು ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನರ್‌ರಚನೆ ಕುರಿತು ಶಿವಕುಮಾರ್ ಪಾಳಯದಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಬಜೆಟ್‌ಗೆ ಮುನ್ನ ಸಂಪುಟ ಪುನರ್‌ರಚನೆ ಅಗತ್ಯವಿದೆ ಎಂಬ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದೂತರಾಗಿ ಕೆ.ಜೆ. ಜಾರ್ಜ್ ಮೂಲಕ ಹೈಕಮಾಂಡ್‌ಗೆ ಕಳುಹಿಸಿದ್ದಾರೆಯೇ ಎಂಬ ಊಹಾಪೋಹಗಳು ದಟ್ಟವಾಗಿವೆ.
ತುಮಕೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಯ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. “ಡಿಸಿಎಂ ದೆಹಲಿ ಭೇಟಿ ಕುರಿತು ನನಗೆ ಮಾಹಿತಿ ಇಲ್ಲ,” ಎಂದು ಅವರು ಹೇಳಿದ್ದಾರೆ. ಇನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೂ ಮುನ್ನ, ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದರು. ಈ ವೇಳೆ, ಮಾಜಿ ಸಚಿವ ರಾಜಣ್ಣ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸುವ ಕುರಿತು ಹೈಕಮಾಂಡ್ ಜೊತೆ ಚರ್ಚಿಸುವುದಾಗಿ ಸಿಎಂ ತಿಳಿಸಿದ್ದಾರೆ.
ಇನ್ನೊಂದೆಡೆ, ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ಕೆ.ಜೆ. ಜಾರ್ಜ್ ಅವರು ದೆಹಲಿಯ 10 ಜನಪಥ್‌ನಲ್ಲಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಸುಮಾರು 40 ನಿಮಿಷಗಳ ಕಾಲ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಸಂಪುಟ ಪುನರ್‌ರಚನೆಯ ಅಗತ್ಯವನ್ನು ಜಾರ್ಜ್ ಅವರು ರಾಹುಲ್ ಗಾಂಧಿಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಜಾರ್ಜ್ ಅವರು ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ವೀಕ್ಷಕರಾಗಿರುವ ಹಿನ್ನೆಲೆಯಲ್ಲಿ, ಆ ಸಂಬಂಧದ ಚರ್ಚೆಯೂ ನಡೆದಿರಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.
ಗಮನಾರ್ಹ ಸಂಗತಿಯೆಂದರೆ, ರಾಹುಲ್ ಗಾಂಧಿಯನ್ನು ಭೇಟಿಯಾಗುವ ಮೊದಲು ಕೆ.ಜೆ. ಜಾರ್ಜ್ ಅವರು ದೆಹಲಿಯಲ್ಲೇ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಜಾರ್ಜ್ ಅವರು ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆಯೇ ಎಂಬ ಕುತೂಹಲ ಹೆಚ್ಚಾಗಿದೆ.
ಇದೇ ವೇಳೆ, ಡಿ.ಕೆ. ಶಿವಕುಮಾರ್ ಅವರು ಶನಿವಾರವೂ ದೆಹಲಿಯಲ್ಲೇ ಉಳಿದು ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಅವರು ಸೋನಿಯಾ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗುವರೇ ಎಂಬುದನ್ನು ಕಾದು ನೋಡಬೇಕಿದೆ.




