ಬೆಂಗಳೂರು: ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ವೇಳೆ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಕೂಡ ಉಪಸ್ಥಿತರಿದ್ದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಮಹತ್ವದ ಸಭೆಗೆ ಮುನ್ನ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಮಾಣವಚನ ಸಮಾರಂಭದ ವ್ಯವಸ್ಥೆಗಳ ಕುರಿತು ರಾಜ್ಯಪಾಲರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಪಾಲರು ಮಧ್ಯಾಹ್ನ ಧರ್ಮಸ್ಥಳಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಜ್ಯೋತಿಷಿಗಳ ಸಲಹೆಯಂತೆ ಜೂನ್ 1, ಜೂನ್ 3 ಹಾಗೂ ಜೂನ್ 5ರಂದು ಪ್ರಮಾಣವಚನ ಸ್ವೀಕಾರಕ್ಕೆ ಶುಭ ದಿನಗಳಿವೆ ಎಂದು ಸೂಚಿಸಲಾಗಿದ್ದು, ಈ ದಿನಾಂಕಗಳ ಕುರಿತು ಶಿವಕುಮಾರ್ ರಾಜ್ಯಪಾಲರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಇದಲ್ಲದೆ ಪ್ರಮಾಣವಚನ ಸಮಾರಂಭವನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ಧೂರಿಯಾಗಿ ನಡೆಸಬೇಕೇ ಅಥವಾ ರಾಜಭವನದಲ್ಲೇ ಆಯೋಜಿಸಬೇಕೇ ಎಂಬ ವಿಚಾರವೂ ಚರ್ಚೆಗೆ ಬಂದಿದೆ. ಮೂಲಗಳ ಪ್ರಕಾರ, ಜೂನ್ 3ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಹೆಚ್ಚಿದ್ದು, ಈ ಕುರಿತು ರಾಜ್ಯಪಾಲರ ಕಚೇರಿಗೆ ಮಾಹಿತಿ ನೀಡಲಾಗಿದೆ.
ಇದಕ್ಕೂ ನಡುವೆ ಉಪಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ ಆರಂಭವಾಗಿದೆ. ಲಿಂಗಾಯತ ಸಮುದಾಯದ ಹಿರಿಯ ನಾಯಕರು ಎಂ.ಬಿ. ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಅವರು ಉಪಮುಖ್ಯಮಂತ್ರಿ ಹುದ್ದೆಗೆ ಆಕಾಂಕ್ಷಿಗಳಾಗಿದ್ದಾರೆ.
ಅದೇ ರೀತಿ ಮಾಜಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಹಿರಿಯ ಶಾಸಕ ತನ್ವೀರ್ ಸೇಠ್ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೆಸರುಗಳೂ ಉಪಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಕೇಳಿಬರುತ್ತಿವೆ.
ಕರಾವಳಿ ಭಾಗದ ನಾಯಕ ಯು.ಟಿ. ಖಾದರ್ ಹಾಗೂ ಮೈಸೂರು ಜಿಲ್ಲೆಯ ತನ್ವೀರ್ ಸೇಠ್ ಅವರಿಗೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇತ್ತೀಚೆಗೆ ತನ್ವೀರ್ ಸೇಠ್ ಅವರು ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಬೇಸರವಿಲ್ಲ ಎಂದು ಹೇಳಿಕೆ ನೀಡಿದ್ದರು.
ಪರಿಶಿಷ್ಟ ಜಾತಿ ಸಮುದಾಯದ ಹಿರಿಯ ನಾಯಕರಾದ ಜಿ. ಪರಮೇಶ್ವರ್ ಹಾಗೂ ಎಚ್.ಸಿ. ಮಹದೇವಪ್ಪ ಕೂಡ ಉಪಮುಖ್ಯಮಂತ್ರಿ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪ್ರಮುಖ ಜವಾಬ್ದಾರಿ ನೀಡುವ ಸಾಧ್ಯತೆಯನ್ನೂ ಕಾಂಗ್ರೆಸ್ ಹೈಕಮಾಂಡ್ ಪರಿಶೀಲಿಸುತ್ತಿದೆ ಎನ್ನಲಾಗಿದೆ.
ಆದರೆ ವಿವಿಧ ಸಮುದಾಯಗಳು ಹಾಗೂ ಗುಂಪುಗಳಿಂದ ಹೆಚ್ಚುತ್ತಿರುವ ಬೇಡಿಕೆಗಳ ಹಿನ್ನೆಲೆಯಲ್ಲಿ ಯಾವುದೇ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸದಿರುವ ಆಯ್ಕೆಯನ್ನೂ ಪಕ್ಷದ ನಾಯಕತ್ವ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ಮುಖ್ಯಮಂತ್ರಿ ಜೊತೆಗೆ 12 ರಿಂದ 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇತ್ತ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಮ್ಮ ಕಾವೇರಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಬಳಿಕ ತುಮಕೂರು ಜಿಲ್ಲೆಯ ಪಾವಗಡಕ್ಕೆ ತೆರಳಿ ಮಾಜಿ ಸಚಿವ ವೆಂಕಟರಮಣಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ. ಸಂಜೆ 4 ಗಂಟೆಗೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.




