ಬೆಂಗಳೂರು: ಪತ್ನಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಆಕೆಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿ, ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ರಾಜಕಾಲುವೆಗೆ ಎಸೆದ ಆರೋಪದ ಮೇಲೆ ಬಿಹಾರ ಮೂಲದ ವಲಸೆ ಕಾರ್ಮಿಕನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು 22 ವರ್ಷದ ಮೊಹಮ್ಮದ್ ಇಫ್ಜಾನ್ ಎಂದು ಗುರುತಿಸಲಾಗಿದ್ದು, ಕೊಲೆಯಾದ ಮಹಿಳೆ 25 ವರ್ಷದ ರುಕ್ಸಾನಾ ಎಂದು ತಿಳಿದುಬಂದಿದೆ. ದಂಪತಿ ಬೆಂಗಳೂರಿನ ಗೋವಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ರುಕ್ಸಾನಾ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದರೆ, ಇಫ್ಜಾನ್ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ಬಿಹಾರ ಮೂಲದವರಾಗಿದ್ದು, ಪರಸ್ಪರ ಪ್ರೀತಿಸಿ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ.
ಪತ್ನಿ ಮೊಬೈಲ್‌ನಲ್ಲಿ ಆಗಾಗ ಯಾರೊಂದಿಗೋ ಮಾತನಾಡುತ್ತಾಳೆ ಹಾಗೂ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಇಫ್ಜಾನ್ ಅನುಮಾನಿಸುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಅಕ್ಟೋಬರ್ 10ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ತೀವ್ರಗೊಂಡಿತ್ತು. ಈ ವೇಳೆ ಇಫ್ಜಾನ್ ಕಲ್ಲಿನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 13ರಂದು ಸ್ಥಳೀಯರೊಬ್ಬರು ಚರಂಡಿಯಲ್ಲಿ ಮಹಿಳೆಯ ಶವ ಇರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಈ ನಡುವೆ, ಗೋವಿಪುರದಲ್ಲಿ ವಾಸವಿದ್ದ ಮಹಿಳೆಯೊಬ್ಬರು ಹಲವು ದಿನಗಳಿಂದ ಕಾಣಿಸುತ್ತಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಸುಳಿವಿನ ಆಧಾರದಲ್ಲಿ ಪೊಲೀಸರು ತನಿಖೆ ಮುಂದುವರಿಸಿ ಇಫ್ಜಾನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಪತ್ನಿಯನ್ನು ಬಿಹಾರಕ್ಕೆ ಕಳುಹಿಸಿರುವುದಾಗಿ ಆರೋಪಿ ಹೇಳಿದ್ದಾನೆ. ಆಕೆಯ ಮೊಬೈಲ್ ಸಂಖ್ಯೆ ಕೇಳಿದಾಗ, ಆಕೆ ಮೊಬೈಲ್ ಬಳಸುತ್ತಿರಲಿಲ್ಲ ಎಂದು ತಿಳಿಸಿದ್ದಾನೆ. ಆತನ ಹೇಳಿಕೆಗಳಲ್ಲಿ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸಿದಾಗ, ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯ ಬಳಿಕ ಶವವನ್ನು ವಿಲೇವಾರಿ ಮಾಡಲು ಇಫ್ಜಾನ್ ತನ್ನ ಕೆಲಸದ ಸ್ಥಳದಿಂದ ಸ್ಕೂಟರ್ ಪಡೆದುಕೊಂಡಿದ್ದ ಎನ್ನಲಾಗಿದೆ. ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.




