Saturday, November 14, 2026

ನಿಖಿಲ್ ಕುಮಾರಸ್ವಾಮಿ ಭೇಟಿ ವೇಳೆ ಮಾರಮ್ಮ ದೇಗುಲಕ್ಕೆ ಬೀಗ! ರಾಮನಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ರಾಮನಗರ: ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ದೇವಾಲಯ ಭೇಟಿಯ ವೇಳೆ ಬಿಸಿಲು ಮಾರಮ್ಮ ದೇವಾಲಯಕ್ಕೆ ಬೀಗ ಹಾಕಿದ ಘಟನೆ ರಾಮನಗರ ತಾಲ್ಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ಶುಕ್ರವಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ನಿಖಿಲ್ ಕುಮಾರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ, ನಿಖಿಲ್ ಆಗಮಿಸುವ ಮಾಹಿತಿ ತಿಳಿಯುತ್ತಿದ್ದಂತೆ ದೇವಾಲಯದ ಬಾಗಿಲಿಗೆ ಬೀಗ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ದೇವರ ದರ್ಶನ ಪಡೆಯಲು ನಿಖಿಲ್ ಕುಮಾರಸ್ವಾಮಿ ಕೆಲಕಾಲ ಕಾಯ್ದರೂ ಬೀಗ ತೆಗೆಯಲು ಯಾರೂ ಬಾರದ ಹಿನ್ನೆಲೆಯಲ್ಲಿ ಸುಮಾರು 45 ನಿಮಿಷಗಳ ಬಳಿಕ ಅಲ್ಲಿಂದ ವಾಪಸ್ಸಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತ ದೇವಾಲಯಕ್ಕೆ ಬೀಗ ಹಾಕಿದ್ದಾನೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಮು ಆರೋಪಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಜೆಡಿಎಸ್ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಇದೇ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

More like this
Related

ಬೆಂಗಳೂರಿನಲ್ಲಿ ದುರಂತ: ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು 9 ವರ್ಷದ ಬಾಲಕ ಸಾವು

ಬೆಂಗಳೂರು: ನಗರದ ಶ್ರೀರಾಮಪುರದಲ್ಲಿ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ...

ಉಡುಪಿಯಲ್ಲಿ ಡಿ.28ರಿಂದ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ

₹2.85 ಕೋಟಿ ವೆಚ್ಚದಲ್ಲಿ ಅದ್ಧೂರಿ ಆಚರಣೆ; ಒಂದು ಲಕ್ಷಕ್ಕೂ ಅಧಿಕ ಭಕ್ತರ...

ನ.20ರಂದು ಮಂಗಳೂರಿನಲ್ಲಿ 73ನೇ ರಾಜ್ಯಮಟ್ಟದ ಸಹಕಾರ ಸಪ್ತಾಹ ಸಮಾರೋಪ

ಮಂಗಳೂರು : ನ. 14 ರಿಂದ 20ರವರೆಗೆ ರಾಜ್ಯಾದ್ಯಂತ ಆಚರಿಸಲಾಗುತ್ತಿರುವ 73ನೇ...

ನ.15-17: ದಕ ಮತ್ತು ಉಡುಪಿ ಜಿಲ್ಲೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರ ಸ್ವಾಮಿ ಪ್ರವಾಸ

ಉಡುಪಿ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ...

Copying is disabled on Udupi Digital News.