ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಿದರಷ್ಟೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯ ಎಂಬ ಅಭಿಪ್ರಾಯವನ್ನು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶುಕ್ರವಾರ ಸಂಜೆ ಪದ್ಮನಾಭನಗರದಲ್ಲಿರುವ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್ ನಾಯಕರಿಗೂ ಅರಿವಾಗುತ್ತಿದೆ. ನನಗೂ ಹಾಗೆಯೇ ಅನಿಸುತ್ತಿದೆ ಎಂದರು.
ದೇವೇಗೌಡ ಅವರಿಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಲು ಭೇಟಿ ನೀಡಿದ್ದೆ. ಈ ಸಂದರ್ಭದಲ್ಲಿ ರಾಜ್ಯದ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಸಭೆಗೆ ಎಚ್.ಡಿ. ಕುಮಾರಸ್ವಾಮಿ ಅವರೂ ಬರಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಅವರು ಬಂದಿರಲಿಲ್ಲ. ಆದರೂ ಅವರೊಂದಿಗೂ ಸುದೀರ್ಘವಾಗಿ ಮಾತನಾಡಿದ್ದೇನೆ ಎಂದು ತಿಳಿಸಿದರು.
ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಸುವ ಕುರಿತು ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೇಗೌಡರು ಸೇರಿದಂತೆ ಪಕ್ಷದ ಹಿರಿಯ ನಾಯಕರು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ. ಸದ್ಯ ಮೈತ್ರಿ ಉತ್ತಮವಾಗಿದ್ದು, ಇದೇ ರೀತಿ ಮುಂದುವರಿಯಲಿದೆ ಎಂದು ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಬೆಳವಣಿಗೆಗಳನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಅವರು, ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಹೋಗಿ ಬರುವ ಪ್ರಕ್ರಿಯೆ ಮುಂದುವರಿದಿದೆ. ಕಾಂಗ್ರೆಸ್‌ನೊಳಗಿನ ಕಚ್ಚಾಟವನ್ನು ಗಮನಿಸಿದರೆ, ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.




