ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯಲಿದ್ದು, ಈಗ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
“ಮುಖ್ಯಮಂತ್ರಿ ಬದಲಾವಣೆ ವಿಚಾರ ಬಂದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಹಿರಿಯ ನಾಯಕರು ಕೂತು ಚರ್ಚಿಸಿ ತೀರ್ಮಾನ ಮಾಡುತ್ತಾರೆ. ಈಗ ಆ ಪ್ರಶ್ನೆಯೇ ಇಲ್ಲ,” ಎಂದು ಹೇಳಿದರು.
“ಇನ್ನೂ ಸಮಯ ಇದೆ. ಸೂಕ್ತ ಸಮಯದಲ್ಲಿ ಆ ವಿಚಾರ ಚರ್ಚೆಯಾಗುತ್ತದೆ,” ಎಂದು ಖರ್ಗೆ ತಿಳಿಸಿದ್ದಾರೆ.
ಖರ್ಗೆ ಸಿಎಂ ಆಗುವ ಪ್ರಶ್ನೆಗೆ ಉತ್ತರ
ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನೋಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಇಂತಹ ಚರ್ಚೆಗಳು ಮಾಧ್ಯಮಗಳಲ್ಲಿ ಮಾತ್ರ ನಡೆಯುತ್ತಿವೆ ಎಂದು ಹೇಳಿದರು. ಪಕ್ಷದ ಎಲ್ಲಾ ತೀರ್ಮಾನಗಳು ಸಮೂಹವಾಗಿ ಕೈಗೊಳ್ಳಲಾಗುತ್ತವೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನಲ್ಲಿ ನಾಯಕತ್ವ ಚರ್ಚೆ ಜೋರಾಗಿದೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚಿನ ದೆಹಲಿ ಭೇಟಿಯ ನಂತರ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿವೆ. ಸಿದ್ದರಾಮಯ್ಯ ಬೆಂಬಲಿಗ ಸಚಿವರೂ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಶಿವಕುಮಾರ್ ಬೆಂಬಲಿಗರು ಮೇ 15ರಂದು ಅವರ ಜನ್ಮದಿನದಂದು ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ.
ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಕೂಡ ಮೇ 15ರಂದು ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.




