ಯುಡಿ ನ್ಯೂಸ್ ಡಾಟ್ ಕಾಮ್
ಮೈಸೂರು: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕೆ.ಆರ್.ನಗರದ ಪ್ರಸಿದ್ಧ ಅರ್ಕೇಶ್ವರ ದೇವಸ್ಥಾನದ ಸಮೀಪದಲ್ಲಿ ಭಾನುವಾರ ನಡೆದಿದೆ.
ಮೃತಪಟ್ಟವರನ್ನು ಯಾಸೀನ್ (23), ಫಾತಿಮ್ (30), ನೇಹಾನ್ (19), ಆಲೀಂ (13), ಹುಮಾಯೂನ್ (7) ಸೇರಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ದರ್ಗಾಕ್ಕೆ ಭೇಟಿ ನೀಡಲು ಬಂದಿದ್ದ ಪ್ರವಾಸಿಗರು, ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದರು. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಮುಳುಗಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರೆಂದು ತಿಳಿದುಬಂದಿದೆ.
ಕೆ.ಆರ್. ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳೀಯ ಈಜುಗಾರರ ನೆರವಿನೊಂದಿಗೆ ನದಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.




